ಪರಿಷತ್ ಚುನಾವಣೆ: ಮತ ಎಣಿಕೆ‌ ಕೇಂದ್ರ ಸ್ಥಾಪನೆಗೆ ಸ್ಥಳ ಪರಿಶೀಲನೆ

ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಮತ ಎಣಿಕೆ ಕೇಂದ್ರ ಸ್ಥಾಪನೆಗಾಗಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಶನಿವಾರ(ನ.13) ಸ್ಥಳ ಪರಿಶೀಲನೆ ನಡೆಸಿದರು.

ನಗರದ ಬಿ.ಕೆ.ಮಾಡೆಲ್ ಹೈಸ್ಕೂಲ್ ಹಾಗೂ ಜ್ಯೋತಿ ಕಾಲೇಜು ಕಟ್ಟಡಗಳನ್ನು ಪರಿಶೀಲಿಸಲಾಯಿತು.

ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ ಎರಡು ಸ್ಥಾನಗಳಿಗೆ ಡಿಸೆಂಬರ್ 10 ರಂದು ಮತದಾನ ಹಾಗೂ 14 ರಂದು ಮತ ಎಣಿಕೆ ನಡೆಯಲಿದೆ.

ಈ ಹಿನ್ನೆಲೆಯ ಜಿಲ್ಲಾಧಿಕಾರಿ ಹಿರೇಮಠ ಅವರು, ಬಿ.ಕೆ.ಮಾಡೆಲ್ ಹೈಸ್ಕೂಲ್ ಹಾಗೂ ಜ್ಯೋತಿ ಕಾಲೇಜುಗಳಿಗೆ ಭೇಟಿ ನೀಡಿ ಕಟ್ಟಡಗಳನ್ನು ಹಾಗೂ ಮೂಲಸೌಕರ್ಯಗಳನ್ನು ಪರಿಶೀಲಿಸಿದರು.

ಸ್ಟ್ರಾಂಗ್ ರೂಮ್, ಮತ ಎಣಿಕೆ ಕೇಂದ್ರ ಸ್ಥಾಪನೆಗೆ ಅಗತ್ಯವಿರುವ ಕೊಠಡಿಗಳು ಹಾಗೂ ಲಭ್ಯವಿರುವ ವ್ಯವಸ್ಥೆಯ ಬಗ್ಗೆ ಅಧಿಕಾರಿಗಳು ಮತ್ತು ಸಂಬಂಧಿಸಿದ ಸಂಸ್ಥೆಗಳ ಪ್ರಾಚಾರ್ಯರ ಜತೆ ಚರ್ಚೆಯನ್ನು ನಡೆಸಿದರು.

ಎರಡೂ ಕಟ್ಟಡಗಳನ್ನು ಪರಿಶೀಲಿಸಲಾಗಿದ್ದು, ಮತ ಎಣಿಕೆ ಪ್ರಕ್ರಿಯೆಗೆ ಅನುಕೂಲಕರವಾಗಿರುವ ಸ್ಥಳವನ್ನು ಅಂತಿಮಗೊಳಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ತಹಶಿಲ್ದಾರ ಆರ್.ಕೆ.ಕುಲಕರ್ಣಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಸಂಜೀವಕುಮಾರ್ ಹುಲಕಾಯಿ ಮತ್ತಿತರರು ಉಪಸ್ಥಿತರಿದ್ದರು.

Leave a Reply