ಬೆಳಗಾವಿಯಲ್ಲಿ ರಸ್ತೆ ದುರಸ್ತಿಗೆ 50 ಕೋಟಿ ನೀಡಿ – ಗೋವಿಂದ್ ಕಾರಜೋಳ ಒತ್ತಾಯ
Flood Latest News

ಬೆಳಗಾವಿಯಲ್ಲಿ ರಸ್ತೆ ದುರಸ್ತಿಗೆ 50 ಕೋಟಿ ನೀಡಿ – ಗೋವಿಂದ್ ಕಾರಜೋಳ ಒತ್ತಾಯ

Govind Karjol,Pwd Karnataka,Pwd Karnataka funds,50 Cr for road repair in Belagavi,50 Cr for road repair,Belagavi flood,belagavi floods 2021,belagavi flood latest news,Belagavi road repair

ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ರಸ್ತೆ, ಕಟ್ಟಡಗಳು ಸೇರಿದಂತೆ ಮೂಲಸೌಕರ್ಯಗಳ ದುರಸ್ತಿಗೆ ಲೋಕೋಪಯೋಗಿ ಇಲಾಖೆಗೆ ತಕ್ಷಣವೇ 50 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಬೇಕು ಎಂದು ಸಚಿವ ಗೋವಿಂದ ಕಾರಜೋಳ ಒತ್ತಾಯಿಸಿದರು.

ಶುಕ್ರವಾರ ಸಿಎಂ ಬಿ ಎಸ್ ಯಡಿಯೂರಪ್ಪ ನವರು ಬೆಳಗಾವಿ ಜಿಲ್ಲಾಧಿಕಾರಿ ಜೊತೆಗೆ ಪ್ರವಾಹದ ಬಗ್ಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಬೇಡಿಕೆ ಇಟ್ಟರು.

ತುರ್ತು ಪರಿಸ್ಥಿತಿಯನ್ನು ಸಮರ್ಪಕವಾಗಿ ಬೆಳಗಾವಿ ಹಾಗೂ ಬಾಗಲಕೋಟೆಗೆ ತಲಾ ಇನ್ನೊಂದು ಎನ್.ಡಿ‌.ಆರ್.ಎಫ್ ತಂಡ ನಿಯೋಜಿಸಬೇಕು. ಸದ್ಯಕ್ಕೆ 95 ಸಾವಿರ ಕ್ಯುಸೆಕ್ ನೀರು ಘಟಪ್ರಭಾ ನದಿಗೆ ಹರಿದುಬರುತ್ತಿದ್ದು, ಇದರಿಂದ ಬಾಗಲಕೋಟೆಗೂ ಕೂಡ ಪ್ರವಾಹ ಭೀತಿ ಎದುರಾಗಿದೆ.

ಅತಿವೃಷ್ಟಿಯಿಂದ ಹಾನಿಗೊಳಗಾದ ರಸ್ತೆ ಮತ್ತಿತರ ಮೂಲಸೌಕರ್ಯಗಳ ದುರಸ್ತಿಗಾಗಿ ಲೋಕೋಪಯೋಗಿ ಇಲಾಖೆಗೆ ಸಾವಿರ ಕೋಟಿ ರೂಪಾಯಿ ಅನುದಾನದ ಅಗತ್ಯವಿದೆ ಎಂದು ಹೇಳಿದರು.

ಕಲ್ಲೋಳ ಬ್ಯಾರೇಜ್ ಕಾಮಗಾರಿಗೆ ಮಂಜೂರಾತಿ ನೀಡಲು ಮನವಿ:

ನಲವತ್ತು ವರ್ಷಗಳಷ್ಟು ಹಳೆಯದಾಗಿರುವ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬ್ಯಾರೇಜ್ ನಿರ್ಮಾಣಕ್ಕೆ 35 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ಅನುಮೋದನೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು.

ನೀರಾವರಿ ನಿಗಮದ ಮಂಡಳಿ ಸಭೆಯಲ್ಲಿ ಈಗಾಗಲೇ ಕಲ್ಲೋಳ ಬ್ಯಾರೇಜ್ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದ್ದು, ಹಣಕಾಸು ಇಲಾಖೆಯ ಅನುಮೋದನೆ ಬಾಕಿ‌ ಉಳಿದಿದೆ ಎಂದು ಅಧಿಕಾರಿಗಳು ವಿವರಿಸಿದರು. ಹಣಕಾಸು ಇಲಾಖೆಯ ವತಿಯಿಂದ ಕೂಡ ತಕ್ಷಣವೇ ಮಂಜೂರಾತಿ ನೀಡಬೇಕು. ಅನುಮೋದನೆ ದೊರೆತರೆ ಅಕ್ಟೋಬರ್‌ ನಿಂದ ಕಾಮಗಾರಿ ಆರಂಭಿಸಲಾಗುವುದು ಎಂದು ಸಚಿವ ಕಾರಜೋಳ ತಿಳಿಸಿದರು.

ಬೆಳಗಾವಿ ಪ್ರವಾಹ ನಿರ್ವಹಣೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಳೆ ಕಡಿಮೆಯಾದರೆ ಸದ್ಯಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಒಂದು ವೇಳೆ ಮಳೆ ಮುಂದುವರಿದರೆ ಸ್ವಲ್ಪಮಟ್ಟಿಗೆ ತೊಂದರೆಯಾಗಲಿದೆ ಎಂದು ಸಚಿವ ಗೋವಿಂದ ಕಾರಜೋಳ ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ಆಲಮಟ್ಟಿ‌ ಜಲಾಶಯಕ್ಕೆ ಸದ್ಯಕ್ಕೆ 1.50 ಲಕ್ಷ ಕ್ಯೂಸೆಕ್ ಒಳಹರಿವು ಇದ್ದು, ಪ್ರವಾಹ ಪರಿಸ್ಥಿತಿ ಉದ್ಭವಿಸದಂತೆ ತಡೆಗಟ್ಟುವ ಉದ್ಧೇಶದಿಂದ ಮುಂಜಾಗ್ರತಾ ಕ್ರಮವಾಗಿ 3 ಲಕ್ಷ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ.

ಮಹಾರಾಷ್ಟ್ರದಲ್ಲಿ ಮುಂದಿನ ಮೂರು ದಿನಗಳವರಗೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಬೆಳಗಾವಿ ಪೊಲೀಸ್ ಆಯುಕ್ತರಾದ ಡಾ.ಕೆ.ತ್ಯಾಗರಾಜನ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆಯ ಆಯುಕ್ತರಾದ ಜಗದೀಶ್ ಮತ್ತಿತರರು ವಿಡಿಯೋ ಸಂವಾದದಲ್ಲಿ ಉಪಸ್ಥಿತರಿದ್ದರು.

Leave a Reply